ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ತಿಂಗಳು ಕಳೆದಿದ್ದು, ಇದುವರೆಗೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಬಗ್ಗೆ ಕಾಂಗ್ರೆಸ್ ಲೇವಡಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಆಯ್ಕೆ ಮಾಡಲು ಸಿದ್ಧತೆ ನಡೆಸಿದೆ. ಇದರ ಜೊತೆಗೆ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ ಎಂದು ತಿಳಿದುಬಂದಿಎ. ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂದು ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಅಮಿತ್ ಶಾ, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಎಂದು ನಾವೆಲ್ಲಾ ಭಾವಿಸಿದ್ದೇವೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ಸ್ಪಷ್ಟಪಡಿಸಿದರು.
ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಹೆಸರು ಬಲವಾಗಿ ಕೇಳಿಬರುತ್ತಿದೆ. ರಾಜ್ಯಾಧ್ಯಕ್ಷ ಹುದ್ದೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೆಸರು ಕೇಳಿಬಂದಿದ್ದು, ಹೈಮಾಂಡ್ ಯಾರಿಗೆ ಮಣೆ ಹಾಕುತ್ತೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.