ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಗುಟ್ಟಾಗಿ ನಡೆಸಲಾಗುತ್ತಿದ್ದ ಎರಡು ಪ್ರತ್ಯೇಕ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದ್ದು, ಮೂವರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲಾಗಿದೆ.
ನಗರದ ಸೋಲದೇವನಹಳ್ಳಿ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಕ್ರಮ ದಂಧೆಗಳು ನಡೆಯುತ್ತಿದ್ದವು. ಸಿಸಿಬಿ ಪೊಲೀಸರು ಏಕಕಾಲದಲ್ಲಿ ಈ ಎರಡು ಕಡೆಗಳಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು.
ಬಂಧಿತ ಮಹಿಳಾ ಆರೋಪಿಗಳು ಕಳೆದ ಕೆಲವು ದಿನಗಳಿಂದ ಸೋಲದೇವನಹಳ್ಳಿ ಮತ್ತು ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಯಾರಿಗೂ ಸಂಶಯ ಬಾರದಂತೆ ವೇಶ್ಯಾವಾಟಿಕೆ ಅಡ್ಡೆಗಳನ್ನು ನಡೆಸುತ್ತಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ದಾಳಿ ಸಂಘಟಿಸಲಾಗಿತ್ತು.
ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಗೆ ದೂಡಲ್ಪಟ್ಟಿದ್ದ ಮೂವರು ಮಹಿಳೆಯರನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಮಹಿಳೆಯರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಸೋಲದೇವನಹಳ್ಳಿ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆಗಳಲ್ಲಿ ಈ ಸಂಬಂಧ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

