ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಬ್ರೇಕ್ ನೀಡಿದ್ದ ಮಳೆರಾಯ ಮತ್ತೆ ರಗಳೆ ನೀಡುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ನವೆಂಬರ್ 27 ರಿಂದ 1 ವಾರಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಗಾಳಿಯ ತೀವ್ರತೆ ಸಾಮಾನ್ಯವಾಗಿರಲಿದೆ. ಚಳಿ ಕೂಡ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ನವೆಂಬರ್ 26ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಹಗುರ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 27 ಮತ್ತು 28ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.