ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ರಾಯಚೂರಿನಲ್ಲಿ ಸಣ್ಣ ಮಳೆ ಬರಬಹುದು.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಆಗಸ್ಟ್ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.