ಚಿತ್ರದುರ್ಗ: ಕರ್ನಾಟಕ ವಿಧಾನ ಪರಿಷತ್ತಿಗೆ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆ-2021ರ ಮಾದರಿ ನೀತಿ ಸಂಹಿತೆಯು ಈಗಾಗಲೇ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ವಿಧಾನ ಪರಿಷತ್ ಚುನಾವಣೆ-2021 ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸಂಬಂಧ ಚುನಾವಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆಯು ನ.9 ರಿಂದ ಜಾರಿಗೊಳಿಸಿ, ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೂ ಡಿ.16 ರವರೆಗೆ ಜಾರಿಯಲ್ಲಿ ಇರುತ್ತದೆ. ನೀತಿ ಸಂಹಿತೆಯು ಯಾವುದೇ ರೀತಿಯಲ್ಲಿಯೂ ಉಲ್ಲಂಘಟನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಕಾರ್ಯಕ್ರಮಗಳು ಮಾಡುವಂತಿಲ್ಲ. ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ, ತಾಲ್ಲೂಕು ಪಂಚಾಯಿತಿ ಇಒ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾಯಿತ ಜನಪ್ರತಿನಿಧಿಗಳು ಮತ ಚಲಾಯಿಸಲಿದ್ದು, ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಾಗಿದ್ದು, ಆದಷ್ಟು ಶೀಘ್ರದಲ್ಲಿ ತಮ್ಮ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಮತದಾರರ ವಿವರವನ್ನು ನೀಡುವಂತೆ ತಹಶೀಲ್ದಾರ್ಗಳಿಗೆ ತಿಳಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಸಮಯಕ್ಕೆ ಸರಿಯಾಗಿ ಮಾಹಿತಿ ಒದಗಿಸಬೇಕು. ಚುನಾವಣಾ ಕರ್ತವ್ಯದಲ್ಲಿ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಹಾಗಾಗಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಮತದಾನ ಕೇಂದ್ರಗಳ ಸ್ಥಾಪನೆ, ಮತಗಟ್ಟೆ ಸಿಬ್ಬಂದಿಗಗಳ ನೇಮಕಾತಿ, ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ, ಮತಗಟ್ಟೆ ಸಾಮಾಗ್ರಿಗಳ ಸಂಗ್ರಹಣೆ, ಮತಪೆಟ್ಟಿಗೆಗಳ ಸಿದ್ಧತೆಯನ್ನು ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಚುನಾವಣಾ ತಹಶೀಲ್ದಾರ್ ಸಿ.ಜೆ.ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.