ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಸಂಜೆ ಶಾಸಕಾಂಗ ಸಭೆ ಮುಗಿದ ಬಳಿಕ ಇಂದೇ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ನಾಳೆ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ ಬಳಿಕ ಆಗಿರುವ ಬೆಳವಣಿಗೆ, ಕೋರ್ಟ್​​​ನಲ್ಲಿ ರಿಲೀಫ್ ಸಿಕ್ಕಿರುವ ಕುರಿತು ಸಿದ್ದರಾಮಯ್ಯನವರು ಮಾಹಿತಿ ನೀಡಲಿದ್ದಾರೆ. ಇದೇ ವೇಳೆ ಶಾಸಕಾಂಗ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಕೈಗೊಂಡಿರುವ ನಿರ್ಣಯವನ್ನೂ ಗಮನಕ್ಕೆ ತರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಮತ್ತೊಮ್ಮೆ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ.

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ರವರು ಕುಮಾರಸ್ವಾಮಿ, ನಿರಾಣಿ, ಜೊಲ್ಲೆ ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರವಾಗಿ ಇಂದು ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ತನಿಖಾ ಸಂಸ್ಥೆಗಳು ಮನವಿ ಮಾಡಿದ್ದರೂ ಇನ್ನೂ ಅನುಮತಿ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಲು ಮುಂದಾಗಿದ್ದಾರೆ.

ಕಳೆದ ವರ್ಷ ಕುಮಾರಸ್ವಾಮಿ ವಿರುದ್ಧ ಚಾರ್ಜ್ ಷೀಟ್ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತರಿಂದ ಮನವಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರವಾಗಿ ಹತ್ತು ತಿಂಗಳಾದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್​​ ಕಿಡಿಕಾರಿದೆ.