Bengaluru 17°C

81,589 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿ, ಪರಿಹಾರ ವಿತರಣೆಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಮಳೆಯಿಂದ 81,589 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು: ಮಳೆಯಿಂದ 81,589 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಶುಕ್ರವಾರ ನಡೆಯಿತು. ರಾಜ್ಯಾದ್ಯಂತ 82 ಲಕ್ಷ ಹೆಕ್ಟೇರ್‌ ಗುರಿಗೆ ಎದುರಾಗಿ 7೦ ಲಕ್ಷ ಹೆಕ್ಟೇರ್‌ ಬಿತ್ತನೆ ಆಗಿದೆ. ಈ ಬಾರಿ ಗುರಿ ಮೀರಿ ಸಾಧನೆ ಆಗುವ ನಿರೀಕ್ಷೆ ಇದೆ.


ಮುಂಗಾರು ಪೂರ್ವ ಬಿತ್ತನೆ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿವಿಧ ಏತ ನೀರಾವರಿ ಯೋಜನೆಗಳಡಿ ಎಲ್ಲೆಲ್ಲಿ ಅವಕಾಶವಿದೆಯೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಅಂತರ್ಜಲ ಮಟ್ಟ, ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗುವುದು ಎಂದು ಸಿಎಂ ಹೇಳಿದರು.


ರಾಜ್ಯದ ಜಲಾಶಯಗಳು ಒಟ್ಟು ಶೇ. 89 ರಷ್ಟು ಭರ್ತಿ ಆಗಿವೆ. ಈ ಹಿನ್ನೆಲೆಯಲ್ಲಿ ಕೆರೆಗಳನ್ನು ತುಂಬಿಸುವಂತೆ ಹಾಗೂ ಮಳೆ ಮುನ್ಸೂಚನೆ ಆಧರಿಸಿ, ಮುಂಚಿತವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಗಳಿಂದ ಹೊರಗೆ ಬಿಡುವ ಮೂಲಕ, ಮಳೆಯಾದಾಗ ಜಲಾಶಯಗಳಲ್ಲಿ ಏಕಾಏಕಿ ನೀರಿನ ಸಂಗ್ರಹ ಹೆಚ್ಚಾಗಿ ಪ್ರವಾಹ ಉಂಟಾಗುವುದನ್ನು ತಡೆಗಟ್ಟಬೇಕು. ಈ ಕುರಿತು ಸರ್ಕಾರದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.


 

Nk Channel Final 21 09 2023