ದಾವಣಗೆರೆ: ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂಬ ಮಾಹಿತಿ ತಿಳಿದು ಬಂದಿದೆ.
ಕೆಎಸ್ಆರ್ಟಿಸಿ ಬಸ್ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಆರಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಣ್ಣ ಪುಟ್ಟ ಗಾಯಗೊಂಡವರನ್ನು ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ನ್ಯಾಮತಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.