ಬೆಂಗಳೂರು: ಬೆಂಗಳೂರಿನ ರಸ್ತೆಗಳ ಮೇಲೆ ದಿನದಿಂದ ದಿನಕ್ಕೆ  ಗುಂಡಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಅಕ್ಟೋಬರ್ 31ರೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

ಈ ಕಾರ್ಯಕ್ಕೆ ಹೆಚ್ಚುವರಿ ರೂ. 750 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಸ್ತೆಗಳ ಗುಂಡಿ ಸಮಸ್ಯೆಯ ಕುರಿತು ತೀವ್ರವಾಗಿ ಚರ್ಚೆ ನಡೆಸಲಾಗಿತ್ತೆಂದು ತಿಳಿಸಿದರು.

ನಗರದಲ್ಲಿ 10 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳನ್ನು ಪತ್ತೆಹಚ್ಚಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ. ಇವುಗಳನ್ನು ಶೀಘ್ರ ಸರಿಪಡಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಕೂಡಾ ಅವರು ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ರಸ್ತೆ ಗುಂಡಿಗಳ ಪಟ್ಟಿ ಮಾಡಲು ಹಾಗೂ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ. ಸಾರ್ವಜನಿಕರು ತಮ್ಮ ಪ್ರದೇಶದಲ್ಲಿನ ಗುಂಡಿಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೆ, ಅದನ್ನು ಆದಷ್ಟು ಬೇಗ ಮುಚ್ಚುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು.