ಬೆಂಗಳೂರು: ಮಾನನಷ್ಟ ಮೊಕದ್ದಮೆ ಪ್ರಕರಣವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನಾಳೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಲಿದ್ದಾರೆ.
ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ಪ್ರಕರಣ: 2023 ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಅಂದಿನ ಆಡಳಿತಾರೂಢ ಬಿಜೆಪಿಯನ್ನು ಭ್ರಷ್ಟ ಎಂದು ಲೇಬಲ್ ಮಾಡುವ ಜಾಹೀರಾತುಗಳನ್ನು ಪ್ರಕಟಿಸಿತ್ತು. 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೋರಾತುಗಳನ್ನು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಜೂನ್ 1ರಂದು ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯವು ಜೂನ್ 7 ರಂದು ರಾಹುಲ್ ಗಾಂಧಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು. ರಾಹುಲ್ ಗಾಂಧಿ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ.
ವಿಶೇಷ ನ್ಯಾಯಾಲಯವು 2024 ರ ಮಾರ್ಚ್ 11 ರಂದು ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿತ್ತು. ಆರಂಭದಲ್ಲಿ ರಾಹುಲ್ ಗಾಂಧಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಲೋಕಸಭೆ ಚುನಾವಣೆಯ ಕಾರಣದಿಂದ ಹಾಜರಾಗಲು ಸಾಧ್ಯವಿಲ್ಲ ಮತ್ತು ಜೂನ್‌ನಲ್ಲಿ ವಿಚಾರಣೆಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿದ್ದರು.

