ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ನಾಳೆ ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಹೈದರಾಬಾದ್ ಕರ್ನಾಟಕದವರಿಗಾಗಿ ಜು.14 ರಂದು ಪರೀಕ್ಷೆ ನಡೆಸಲಾಗಿತ್ತು. ಹೈದರಾಬಾದ್ ಕರ್ನಾಟಕವಲ್ಲದ ಇತರರಿಗೆ ಭಾನುವಾರ ಸೆ.1 ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಪರೀಕ್ಷೆಯಲ್ಲಿ ಹೈದರಾಬಾದ್ ಕರ್ನಾಟಕದವರೂ ಬರೆಯಬಹುದು ಎಂದು ಹೇಳಿದ್ದಾರೆ.

ಈ ಪರೀಕ್ಷೆಗೆ 23,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಇದ್ದು, ಆ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ಬೆಂಗಳೂರು, ಬಳ್ಳಾರಿ, ಧಾರವಾಡ, ಕಲಬುರಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.