ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ.
ಮನೋರಾಯನಪಾಳ್ಯದ ನಿವಾಸಿ ತನುಶ್ರೀ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಎ.9ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ತನುಶ್ರೀ ಮೂರು ವಿಷಯಗಳಲ್ಲಿ ಅನುತ್ತೀರ್ಣಗೊಂಡಿರುವುದು ತಿಳಿದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ವಿಷಯ ತಿಳಿದು ಹೆಬ್ಬಾಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಸದ್ಯಕ್ಕೆ ಯಾವುದೇ ಡೆತ್‍ನೋಟ್ ಪತ್ತೆಯಾಗಿಲ್ಲ. ಮೃತದೇಹವನ್ನು ನಗರದ ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

