ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಆಂಧ್ರಪ್ರದೇಶ ಮೂಲದ ಮುನಿರಾಜು ರೆಡ್ಡಿ ಮತ್ತು ಇತರರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೇವಲ ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು ಏಳು ಅಂತಸ್ತಿನ ಕಟ್ಟಡವನ್ನು ನಿರ್ಮಿಸುವ ಮೂಲಕ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಕಳಪೆ ಗುಣಮಟ್ಟದ ನಿರ್ಮಾಣ ಕಾರ್ಯಕ್ಕೆ ಕಾರಣರಾದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕಟ್ಟಡ ಕುಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನೂ ಮೂವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಗಳಿವೆ. ಬೀಮ್ ಗಳು ಮತ್ತು ಕಬ್ಬಿಣದ ರಾಡ್ ಗಳನ್ನು ಕತ್ತರಿಸಲು ಗ್ಯಾಸ್ ಕಟ್ಟರ್ ಗಳನ್ನು ಬಳಸಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜು ತಿಳಿಸಿದ್ದಾರೆ.

ಈವರೆಗೆ 13 ಜನರನ್ನು ರಕ್ಷಿಸಲಾಗಿದೆ. ಐದು ಶವಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ನಾಲ್ವರು ನಾರ್ತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಗಾಯಗೊಂಡ ವ್ಯಕ್ತಿ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.