ಬೆಂಗಳೂರು: ಉತ್ತರ ಬೆಂಗಳೂರಿನ ನಾಗವರ ಸಮೀಪದ ವೀರಣ್ಣಪಾಳ್ಯದಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಶೆಡ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.

ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗಾಗಿ ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿದ್ದ ಶೆಡ್​ಗಳನ್ನು ನಿರ್ಮಿಸಲಾಗಿತ್ತು. ಮೊದಲಿಗೆ ಒಂದು ಶೆಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇತರೆ ಶೆಡ್​ಗಳಿಗೂ ಹಬ್ಬಿದೆ ಎನ್ನಲಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಜನರು ಹೊರಗೆ ಓಡಿ ಬಂದಿದ್ದಾರೆ. 20ಕ್ಕೂ ಹೆಚ್ಚು ಶೆಡ್‌ಗಳು ಬೆಂಕಿಗೆ ಆಹುತಿಯಾಗಿದೆ. ಶೆಡ್​​ನಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.