ಆನೇಕಲ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ. ಬೆಂಗಳೂರು ಹೊರವಲಯದ ಆನೇಕಲ್‌ನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮಂಗಳವಾರ ನಸುಕಿನ ಜಾವ ಮಂಗಳವಾರ ಬೆಳಗ್ಗೆ 4:40ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಟಿವ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಳು ಹೊರಗೆ ಓಡಿ ಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

