ಬೆಂಗಳೂರು : 2025–26ನೇ ಸಾಲಿನ ಪಿ.ಯು.ಸಿ ಪರೀಕ್ಷೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಂತಸದ ಸುದ್ದಿ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಬಿಎಂಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಈ ಕುರಿತು ಬಿಎಂಟಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಸೌಲಭ್ಯ ಕಲ್ಪಿಸಲಾಗಿದೆ. ಪಿ.ಯು.ಸಿ ಪರೀಕ್ಷೆ–1 ಫೆಬ್ರವರಿ 28, 2026 ರಿಂದ ಮಾರ್ಚ್ 17, 2026 ರವರೆಗೆ, ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ವಿವಿಧ ಕೇಂದ್ರಗಳಲ್ಲಿ ಆಯೋಜನೆಯಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪರೀಕ್ಷೆ ನಡೆಯುವ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಹಾಗೂ ಪರೀಕ್ಷೆ ಮುಗಿಸಿ ಹಿಂದಿರುಗುವಾಗ, ಪರೀಕ್ಷಾ ಪ್ರವೇಶ ಪತ್ರ ಪ್ರದರ್ಶಿಸಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಎಲ್ಲಾ ಬಸ್ ಮಾರ್ಗಗಳು ಮತ್ತು ಸುತ್ತುವಳಿಗಳನ್ನು ಕಡ್ಡಾಯವಾಗಿ ಕಾರ್ಯಾಚರಣೆಗೆ ಒಳಪಡಿಸಲಾಗುವುದು. ಅಗತ್ಯವಿದ್ದಲ್ಲಿ ಹೆಚ್ಚುವರಿ ಬಸ್‌ಗಳನ್ನೂ ನಿಯೋಜಿಸಲಾಗುತ್ತದೆ ಎಂದು ಬಿಎಂಟಿಸಿ ತಿಳಿಸಿದೆ.

