ಬೆಂಗಳೂರು: ದುಬೈನಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂಧ ವ್ಯಕ್ತಿಯೊಬ್ಬರನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಗುಪ್ತಚರ ಇಲಾಖೆಯಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಾರ್ಚ್ 4 ರಂದು ಅಂಧ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆದರೆ ಶಂಕಿತನ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಕನ್ನಡ ನಟಿ ರನ್ಯಾ ರಾವ್ ಅವರನ್ನು ಕೆಐಎಯಲ್ಲಿ ಬಂಧಿಸಿದ ಒಂದು ದಿನದ ನಂತರ ಅಂಧ ವ್ಯಕ್ತಿಯ ಬಂಧನವಾಗಿದೆ. ಆತನ ಬಟ್ಟೆಯ ಒಳಗಡೆ 3,44,38,796 ರೂ. ಮೌಲ್ಯದ ಚಿನ್ನವನ್ನು ಮರೆಮಾಡಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಸಂಬಂಧಿತ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಂಧ ವ್ಯಕ್ತಿ ಒಬ್ಬನೇ ಈ ಕೃತ್ಯ ಎಸಗಿದ್ದಾನೆಯೇ ಅಥವಾ ಆತನ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.