News Karnataka Kannada
Monday, May 06 2024
ಬೆಂಗಳೂರು

ಹೆಚ್​ ಡಿಕೆಗೆ ರಾಜ್ಯಾಧ್ಯಕ್ಷ ಪಟ್ಟ: ಹೆಚ್​​​ಡಿ ದೇವೇಗೌಡರಿಂದ ಮಹತ್ವದ ಘೋಷಣೆ

HD Deve Gowda announces HDK's state president's post
Photo Credit : News Kannada

ಬೆಂಗಳೂರು: ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಹೇಳಿದರು.

ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ನೇತೃತ್ವದಲ್ಲಿ ಇಂದು (ಅ.19) ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ಜವಾಬ್ದಾರಿ ಸ್ಥಾನವನ್ನು ನಾವು ಮಾರ್ಪಾಡು ಮಾಡಬೇಕಿದೆ ಎಂದಿದ್ದಾರೆ. ಇದರಿಂದ ಜೆಡಿಎಸ್​ ಸಿದ್ಧಾಂತ ಅಥವಾ ನಾಯಕರಿಗೆ ಯಾವುದೇ ಸಮಸ್ಯೆಯಿಲ್ಲ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ. ಪಕ್ಷ ಉಳಿಸಿಕೊಳ್ಳಬೇಕಾಗಿರುವುದರಿಂದ ಮೈತ್ರಿಮಾಡಿಕೊಂಡಿದ್ದೇವೆ ಎಂದರು.

ರಾಜ್ಯ ಘಟಕ ವಿಸರ್ಜನೆ:
“ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ, ಅಂದರೆ; ಆರ್ಟಿಕಲ್ 10ರ ಪ್ರಕಾರ, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ಆ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ” ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದಾರೆ.

ಹಂಗಾಮಿ ಅಧ್ಯಕ್ಷರಾಗಿ ಕುಮಾರಸ್ವಾಮಿ:
“ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಆ ಸಮಿತಿಯನ್ನು ಈಗಾಗಲೇ ವಿಸರ್ಜನೆ ಮಾಡಲಾಗಿದೆ. ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳನ್ನು ಸುಲಲಿತವಾಗಿ ಮುಂದುವರಿಸಿಕೊಂಡು ಹೋಗಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಡಾಕ್ ಅಧ್ಯಕ್ಷರನ್ನಾಗಿ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ” ಎಂದು ಮಾಜಿ ಪ್ರಧಾನಿಗಳು ಮತ್ತೊಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ, ಕಳೆದ ಕೆಲ ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆಗಳನ್ನು ಅವಲೋಕನ ಮಾಡಿದ ಜೆಡಿಎಸ್ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯು, ಈ ಮಹತ್ವದ ನಿರ್ಧಾರ ಕೈಗೊಳ್ಳಲು ರಾಷ್ಟ್ರೀಯ ಅಧ್ಯಕ್ಷರಿಗೆ ಸಂಪೂರ್ಣ, ಸರ್ವಸಮ್ಮತದ ಅಧಿಕಾರ ನೀಡಿತು.

ಅದಾದ ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಒಳಗೊಂಡಂತೆ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಪ್ರಧಾನಿಗಳು, ಸಮಿತಿ ಕೈಗೊಂಡ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಮಾಜಿ ಪ್ರಧಾನಿಗಳು ಹೇಳಿದ್ದಿಷ್ಟು:
ಚುನಾವಣೆ ಮುಗಿದು ನಾಲ್ಕು ತಿಂಗಳು ಆಯಿತು. ಇಲ್ಲಿ ಸಿ.ಎಂ.ಇಬ್ರಾಹಿಂ ಅವರು ನೀಡಿರುವ ಹೇಳಿಕೆಗಳ ಬಗ್ಗೆ ಪ್ರಸ್ತಾಪ ಮಾಡಲ್ಲ. ಆದರೆ ಹೆ.ಡಿ.ಕುಮಾರಸ್ವಾಮಿ ಹಾಗೂ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಇತರೆ ಮುಖಂಡರ ಜತೆಗೆ ಸಮಾಲೋಚನೆ ಮಾಡಿದ್ದೇವೆ ಎಂದರು ಅವರು.

ಪಕ್ಷದ ವಿವಿಧ ರಾಜ್ಯಗಳ ಘಟಕಗಳಿಗೆ ಮಾಹಿತಿ ನೀಡಲಾಗಿದೆ.‌ ಅವರಿಗೆ ನಮ್ಮ ನಡೆ ಮನವರಿಕೆ ಆಗಿದೆ. ನಮ್ಮ ಬಿಜೆಪಿ ಮೈತ್ರಿ ನಿರ್ಧಾರಕ್ಕೆ ಕೇರಳದ ಘಟಕ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.ಪಕ್ಷದ ಹಲವು ಮುಸ್ಲಿಂ ನಾಯಕರು ಕೂಡ ನಮ್ಮ ಜತೆಗೆ ಇದ್ದಾರೆ. ಯಾರೂ ಧೃತಿಗೆಡಬೇಕಾಗಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬೇರೆ ಬೇರೆ ಸನ್ನಿವೇಶ ಇದೆ. ಕುಮಾರಸ್ವಾಮಿ ಅವರು ಶಾಸಕಾಂಗ ಪಕ್ಷದ ನಾಯಕ ಜವಾಬ್ದಾರಿಯ ಜತೆಗೆ ಜತೆಗೆ ಪಕ್ಷದ ಅಧ್ಯಕ್ಷ ಸ್ಥಾನದ ಹೊಣೆಯನ್ನೂ ನಿರ್ವಹಣೆ ಮಾಡಬೇಕು ಎಂದು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.


ವಿಜಯದಶಮಿ ನಂತರ ಪಕ್ಷ ಸಂಘಟನೆ:
ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚುನಾವಣೆ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಲಾಗಿದೆ. ಪಕ್ಷದಲ್ಲಿ ಪುನಶ್ಚೇತನ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಜವಾಬ್ದಾರಿ ನಿರ್ವಹಣೆ ಮಾಡಲು ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಆದೇಶದಂತೆ ಪಕ್ಷವನ್ನು ಸಶಕ್ತಗೊಳಿಸಲಾಗುವುದು ಎಂದರು.

ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲರ ಸಹಮತದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲರನ್ನೂ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ. ವಿಜಯದಶಮಿ ಬಳಿಕ ಪಕ್ಷ ಸಂಘಟನೆ ಹಾಗೂ ರಾಜ್ಯದ ಸಮಸ್ಯೆ ಹಿನ್ನಲೆಯಲ್ಲಿ ಪರಿಣಾಮವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು ಅವರು.

ಇನ್ನು ಕುಟುಂಬ ರಾಜಕಾರಣದ ಕುರಿತಾದ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಕಾಂಗ್ರೆಸ್ ಪಕ್ಷದ ಏನು? ಅವರದೂ ಕುಟುಂಬ ಮೂಲ ಅಲ್ಲವೇ? ಅವರಿಗೆ ಯಾವ ನೈತಿಕತೆ‌ ಇದೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಎಂದು ಎಚ್ ಡಿ ಕೆ ಪ್ರಶ್ನಿಸಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ಅಲ್ಕೊಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ, ಕೋರ್ ಕಮಿಟಿ ಸಂಚಾಲಕ ವೈ.ಎಸ್.ವಿ.ದತ್ತ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು