ಬೆಂಗಳೂರು : ಅರಬ್ಬಿ ಸಮುದ್ರ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನವೆಂಬರ್ 7ರಿಂದ 9ರ ಅವಧಿಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಈಗಾಗಲೇ ಬೆಂಗಳೂರು ನಗರ, ಹಾಸನ, ದಕ್ಷಿಣ ಕನ್ನಡ, ಉಡುಪಿ, ತುಮಕೂರು ಮತ್ತು ಕೊಡಗು ಸೇರಿದಂತೆ ಹಲವು ಭಾಗಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.