ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿದೆ.
ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ.
ಬುಧವಾರ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ರಾಜೀನಾಮೆ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ ಎನ್ನಲಾಗುತ್ತದೆ.
ಇನ್ನೊಂದು ಕಡೆ ಬಿಜೆಪಿ ಜೂನ್ 6ರ ಒಳಗಡೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತ್ತು. ಇಂದಿಗೆ ಡೆಡ್‌ಲೈನ್ ಅಂತ್ಯವಾಗಿದ್ದು ರಾಜೀನಾಮೆ ನೀಡದೇ ಇದ್ದರೆ ಬಿಜೆಪಿ ಉಗ್ರವಾಗಿ ಪ್ರತಿಭಟಿಸುವ ಸಾಧ್ಯತೆಯಿದೆ.