ಬೆಂಗಳೂರು: ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಪರಿವೀಕ್ಷಣೆ ಮಾಡಿದರು. ಪೋಡಿಯಂ ಮೇಲಿದ್ದ ಬುಲೆಟ್ ಪ್ರೂಫ್ ತೆರವು ಮಾಡಲು ಸಿಎಂ ಸೂಚಿಸಿದ್ದು ಸಿಎಂ ಸೂಚನೆ ಮೇರೆಗೆ ಬುಲೆಟ್ ಪ್ರೂಫ್ ತೆರವು ಮಾಡಲಾಗಿದೆ.

ಮಾಣೆಕ್ ಪರೇಡ್​​ ಷಾ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ಬಳಿಕ ಗ್ಯಾರಂಟಿಯಿಂದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ. ಸುಮಾರು 4 ರಿಂದ 5 ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಅನೇಕ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತಿದೆ. ಇದರಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ ಆಗಿದೆ. ಈವರೆಗೆ 25,258 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡೋದಾಗಿ ಘೋಷಿಸಲಾಗಿತ್ತು. ಆದರೆ ಕೇಂದ್ರದ ಅಸಹಕಾರದಿಂದ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಒತ್ತಾಯಿಸುತ್ತೇನೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ ಮತದಾರರು. ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಸಿಎಂ ಹೇಳಿದರು.

— CM of Karnataka (@CMofKarnataka) August 15, 2024