ಅನೇಕಲ್ : ತಾಲ್ಲೂಕಿನ ಚಂದಾಪುರ ಫ್ಲೈಓವರ್ ಬಳಿ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭಾರೀ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಸಾಗುತ್ತಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಸಮೀಪ ಪರಸ್ಪರ ಡಿಕ್ಕಿಯಾಗಿದೆ.
ಬೆಂಗಳೂರಿನಿಂದ ಚೆನ್ನೈ ಕಡೆಗೆ ಸಾಗುತ್ತಿದ್ದ ವೇಳೆ ಮುಂಭಾಗದಲ್ಲಿ ಚಲಿಸುತ್ತಿದ್ದ ಬಸ್‌ಗೆ ಹಿಂಬದಿಯಿಂದ ಬಂದ ಮತ್ತೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅತಿವೇಗದ ಚಾಲನೆ, ಹಾಗೂ ಚಾಲಕನ ನಿಯಂತ್ರಣ ತಪ್ಪಿರುವುದರಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಅಪಘಾತದ ತೀವ್ರತೆಗೆ ಎರಡೂ ಬಸ್‌ಗಳು ಗಂಭೀರವಾಗಿ ಹಾನಿಗೊಳಗಾಗಿವೆ. ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ತೀವ್ರ ಟ್ರಾಫಿಕ್ ಜಾಮ್ ಉಂಟಾಯಿತು. ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

