ಬೆಂಗಳೂರು: ಪ್ರಧಾನಿ ಮೋದಿ ಅವರು ಇದೇ ಶುಕ್ರವಾರ (ಜ.19) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಸ್ವಾಗತಕ್ಕೆ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ದೇಶಿಸಿದ್ದು, ಪ್ರಮುಖರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಜತೆಗೆ ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ, ಮೋದಿ ರೋಡ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದು, ಪ್ರಧಾನಿ ಕಾರ್ಯಾಲಯದಿಂದ ಒಪ್ಪಿಗೆಗೆ ಕಾಯಲಾಗುತ್ತಿದೆ ಎನ್ನಲಾಗಿದೆ.
ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಇದೇ 19ರಂದು ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದರು.
ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಜತೆ ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ, ರೋಡ್ ಶೋ ಸಂಬಂಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ.