ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

