ಬೆಂಗಳೂರು: ಕಾನೂನು ಸೇವೆಗಳ ಪ್ರಾಧಿಕಾರದಿಂದ, ಜೈಲಿನಲ್ಲಿರುವ ಅಪರಾಧಿಗಳಿಗೆ ಕಾನೂನು ಸೇವೆ ಒದಗಿಸಲು ಹೊಸ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಕರಣಗಳನ್ನು ನಡೆಸಲು ತೊಂದರೆ ಅನುಭವಿಸುತ್ತಿರುವ ಅಪರಾಧಿಗಳು ನ್ಯಾಯಾಲಯದ ಗಮನಕ್ಕೆ ತಂದು, ಕಾನೂನು ಪ್ರಾಧಿಕಾರದಿಂದ ವಕೀಲರ ಉಚಿತ ಕಾನೂನು ಸೇವೆ ಪಡೆಯಬಹುದಾಗಿದೆ.
ಆದಷ್ಟು ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು ಎಂದು ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದ ಪ್ರಧಾನ ಸಿವಿಲ್ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಕಾನೂನು ಪ್ರಾಧಿಕಾರದ ಅಧ್ಯಕ್ಷರಾದ ಮುರಳೀಧರ್ ಪೈ ತಿಳಿಸಿದರು.
ಬೆಂಗಳೂರಿನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ಮೊದಲನೇ ಮಹಡಿಯ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಕಳೆದ ಬಾರಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿದ್ದ 26,353 ಪ್ರಕರಣಗಳು ಹಾಗೂ 3,66,241 ವ್ಯಾಜ್ಯ ಪೂರ್ವ ಪ್ರಕರಣಗಳು, ಒಟ್ಟು 3,92,594 ಪ್ರಕರಣಗಳನ್ನು ತೀರ್ಮಾನ ಮಾಡಲಾಗಿದೆ. ಪ್ರಸ್ತುತ ಬೆಂಗಳೂರು ನಗರ ಜಿಲ್ಲೆಯಲ್ಲಿ 3,89,520 ಪ್ರಕರಣಗಳು ಬಾಕಿಯಿವೆ. ಈ ಬಾರಿ 35 ಸಾವಿರಕ್ಕೂ ಅಧಿಕ ಪ್ರಕರಣ ತೀರ್ಮಾನಿಸಲು ಪ್ರಯತ್ನಿಸಲಾಗುವುದು ಎಂದರು.
ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನಗಳನ್ನು ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ,
ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಉಚಿತ ಸೇವೆಗಳನ್ನು ಪಡೆಯಲು NALSA (ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ) ಅವರು ಸಹಾಯವಾಣಿ ಸಂಖ್ಯೆ ಅಭಿವೃದ್ಧಿಪಡಿಸಿದ್ದು, ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ದೇಶದ ಯಾವುದೇ ಭಾಗದ ಸಾರ್ವಜನಿಕರು ಯಾವುದೇ ಭಾಷೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ವರದರಾಜು.ಬಿ. ಉಪಸ್ಥಿತರಿದ್ದರು