ಬೆಂಗಳೂರು: ಪುತ್ತೂರಿನ ಉಪ್ಪಳಿಗೆಯಲ್ಲಿ ಆಯೋಜಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಗ್ರಾಮೀಣ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.

ಪ್ರಕರಣ ಸಂಬಂಧ ಈಶ್ವರಿ ಪದ್ಮುಂಜ ಎಂಬುವರು ನೀಡಿರುವ ದೂರು ಹಾಗೂ ಪುತ್ತೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಡಾ ಪ್ರಭಾಕರ ಭಟ್ (83) ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್ ಅವರು, ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ್ದಾರೆನ್ನಲಾದ ಸಂಪೂರ್ಣ ಭಾಷಣದ ಪ್ರತಿಲಿಪಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕಿ ಆಸ್ಮಾ ಕೌಸರ್ ಸಹ 42 ನಿಮಿಷಗಳ ಭಾಷಣದ ವಿಡಿಯೊ ಒಳಗೊಂಡ ಪೆನ್‌ಡ್ರೈವ್ ಅನ್ನು ನ್ಯಾಯಾಲಯಕ್ಕೆ ಒದಗಿಸಿದರು.

ಅದನ್ನು ಸ್ವೀಕರಿಸಿದ ನ್ಯಾಯಪೀಠ, ಭಾಷಣವನ್ನು ಪರಿಶೀಲಿಸಿದ ಬಳಿಕ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆ.5ಕ್ಕೆ ಮುಂದೂಡಿತಲ್ಲದೆ, ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಪುತ್ತೂರು ಗ್ರಾಮೀಣ ಪೊಲೀಸರಿಗೆ ನಿರ್ದೇಶಿಸಿತು.