ಬೆಂಗಳೂರು: ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣದಲ್ಲಿ ಬಂಧನವಾಗಿದ್ದ ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಪರಿಶೀಲನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಅರೆಸ್ಟ್ ಅಗಿದ್ದ ಪುನೀತ್ ಕೆರೆಹಳ್ಳಿಗೆ ಜುಲೈ 27ರಂದು ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಇದರ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.
ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ದೇಶಬಿಟ್ಟು ಹೋಗಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಮತ್ತೆ ಇಂತಹದ್ದೆ ಅಪರಾಧ ಕೃತ್ಯದಲ್ಲಿ ಭಾಗಿ ಆಗಬಾರದು ಎಂದು ಕೋರ್ಟ್ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು.
ಪೊಲೀಸರು ಮಧ್ಯಪ್ರವೇಶಿಸಿ, ಮಾಂಸವನ್ನು ವಶಪಡಿಸಿಕೊಂಡಿದ್ದರು. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿದ್ದವು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.
ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಮತ್ತು ತಂಡ ದಾಳಿ ಮಾಡಿತ್ತು. ಆದರೆ, ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಂಸದ ಸ್ಯಾಂಪಲ್ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ಆದರೆ, ಅದು ಮೇಕೆ ಮಾಂಸ ಎಂದು ವರದಿಯಲ್ಲಿ ಬಂದಿರುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದರು.

