News Karnataka Kannada
Friday, May 03 2024
ರಾಮನಗರ

ರಾಮನಗರ: ಬಿಡದಿಯಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕ್ರಮ

Ramanagara: Steps taken to control plastic in Bidadi
Photo Credit : By Author

ರಾಮನಗರ: ಬಿಡದಿ ಪಟ್ಟಣದಲ್ಲಿ ವಾಣಿಜ್ಯ ಕೇಂದ್ರಗಳ ಮೇಲೆ ದಾಳಿ ಮುಂದುವರೆಸಿದ ಪುರಸಭೆ ಅಧಿಕಾರಿಗಳು ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ 10ಕ್ಕೂ ಹೆಚ್ಚು ಅಂಗಡಿ ಮಾಲೀಕರ ವಿರುದ್ಧ ದಂಡ ವಿಧಿಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಡದಿ ಪುರಸಭೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಪಟ್ಟಣದಲ್ಲಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳುವ ಜತೆಗೆ ದಂಡ ಪ್ರಯೋಗದ ಮಾರ್ಗ ಹಿಡಿದಿದ್ದಾರೆ. ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಲಾ 500 ರೂ.ಗಳವರೆಗೆ ದಂಡ ವಸೂಲು ಮಾಡಿದ್ದಾರೆ.

ಬಿಡದಿ ಪಟ್ಟಣದಲ್ಲಿ ಅವ್ಯಾಹುತವಾಗಿ ನಡೆಯುತ್ತಿರುವ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಪುರಸಭೆ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ನಾನಾ ರೀತಿಯ ಅಂಗಡಿ ಹಾಗೂ ವಾಣಿಜ್ಯ ಕೇಂದ್ರಗಳ ಮೇಲೆ ಕಾರ್ಯಾಚರಣೆ ನಡೆಸಿ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್ ಕವರ್, ಕ್ಯಾರಿ ಬ್ಯಾಗ್, ಗ್ಲಾಸ್ (ನೀರಿನ ಲೋಟ) ಸೇರಿದಂತೆ ಮತ್ತಿತರ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧಿಸಿರುವ ಬಗ್ಗೆ ಪ್ರಚಾರ ನೆಡೆಸಿ ಅರಿವು ಮೂಡಿಸಿದರೂ ಎಚ್ಚೆತ್ತುಕೊಳ್ಳದ ವರ್ತಕರಿಗೆ ದಂಡ ವಿಧಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಿಕ್ಕಿ ಬಿದ್ದರೆ ಕೇಸ್ ದಾಖಲಿಸುವ ಶಾಕ್ ನೀಡಿದ್ದಾರೆ.

ಪುರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ ವೇಳೆ ಕೆಲ ವರ್ತಕರು ಮರು ಮಾತನಾಡದೆ ಪ್ಲಾಸ್ಟಿಕ್ ವಸ್ತುಗಳನ್ನು ಸ್ವಯಂ ಪ್ರೇರಿತರಾಗಿ ಒಪ್ಪಿಸಿದರು. ಕೆಲವರು ವಿರೋಧ ವ್ಯಕ್ತಪಡಿಸಿ, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಲೋಟ ಮುಂತಾದ ವಸ್ತುಗಳ ಉತ್ಪಾದನೆಯನ್ನು ಮೊದಲು ನಿಲ್ಲಿಸಿ, ಮಾರುಕಟ್ಟೆಗೆ ಬರದಂತೆ ತಡೆಗಟ್ಟಿ ಎಂದು ಆಕ್ರೋಶವನ್ನು ಹೊರ ಹಾಕಿದರು. ಕೆಲವು ಅಂಗಡಿಗಳಲ್ಲಿ ಅಧಿಕಾರಿಗಳು ಮತ್ತು ವರ್ತಕರ ನಡುವೆ ವಾಗ್ವಾದಗಳು ನಡೆದವು. ಆದರೆ ಮುಲಾಜಿಗೆ ಒಳಗಾಗದ ಅಧಿಕಾರಿಗಳು ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮುಂದುವರೆದರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಿಡದಿ ಪುರಸಭೆ ಮುಖ್ಯಾಧಿಕಾರಿ ಕೆ.ಜಿ.ರಮೇಶ್ ಅವರು ಮಾತನಾಡಿ, ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣ ನಿಯಂತ್ರಿಸುವ ಸಲುವಾಗಿ ಪುರಸಭೆ ಕೆಲವು ಕಟ್ಟು ನಿಟ್ಟಿನ ನಿರ್ಣಯಗಳನ್ನು ತೆಗೆದುಕೊಂಡಿದ್ದರೂ ಕೆಲವು ವರ್ತಕರು ಎಚ್ಚೆತ್ತುಕೊಂಡಿಲ್ಲ. ಇನ್ನು ಮುಂದೆ ಪ್ಲಾಸ್ಟಿಕ್ ವಶದ ಜೊತೆಗೆ ದಂಡ ಪ್ರಯೋಗ, ನಂತರ ದುಪ್ಪಟ್ಟು ದಂಡ ವಸೂಲಿ, ಅಂತಿಮವಾಗಿ ಕ್ರಿಮಿನಲ್ ಕೇಸ್ ದಾಖಲಿಸುವ ಕ್ರಮಗಳನ್ನು ಕೈಗೊಳ್ಳುವ ಆದೇಶವಿದೆ ಎಂದರು.

ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡಲು ನಾಗರಿಕರ ಸಹಕಾರ ಅಗತ್ಯ. ಪುರಸಭೆ ವ್ಯಾಪ್ತಿಯ ಅಂಗಡಿಗಳ ಮುಂಭಾಗದಲ್ಲಿ ಜಾಗೃತಿ ಫಲಕ ಹಾಕುವ ಜೊತೆಗೆ ಕರಪತ್ರಗಳನ್ನು ನೀಡಿ ತಿಳುವಳಿಕೆ ಮೂಡಿಸಲಾಗುತ್ತಿದೆ. ಪ್ಲಾಸ್ಟಿಕ್ ಮಾರಾಟ ಮತ್ತು ದಾಸ್ತಾನು ಇಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡ ರಚಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ. ನಿಯಮ ಉಲ್ಲಂಘಿಸಿರುವ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗುತ್ತಿದೆ. ಪರಿಸರ ನೈರ್ಮಲ್ಯ ತಡೆಗಟ್ಟಿ ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡಬೇಕಾದರೆ ನಾಗರಿಕರು ಪುರಸಭೆಯೊಂದಿಗೆ ಕೈಜೋಡಿಸಿ ಸಹಕಾರ ನೀಡಬೇಕು ಎಂದರು.

ಕಿರಾಣಿ ಅಂಗಡಿ, ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು, ಬೇಕರಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳು, ಕಲ್ಯಾಣ ಮಂಟಪಗಳು ಸೇರಿದಂತೆ ಇನ್ನು ಕೆಲವು ಪ್ರಮುಖ ವಾಣಿಜ್ಯ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಪ್ಲಾಸ್ಟಿಕ್ ವಸ್ತುಗಳ ಸರಬರಾಜು, ಮಾರಾಟ ಮತ್ತು ಬಳಕೆ ನಿಯಮ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಕಾನೂನು ಕ್ರಮ ಅನಿವಾರ್ಯ ಎಂದು ಅವರು ನುಡಿದರು.

ಕಾರ್ಯಾಚರಣೆಯಲ್ಲಿ ಪುರಸಭೆ ಮ್ಯಾನೇಜರ್ ಶಿವಣ್ಣ, ಪರಿಸರ ಎಂಜಿನಿಯರ್ ನಮಸ್ಕೃತ, ಪೌರಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಲಪತಿ, ಸಿಬ್ಬಂದಿ ಅನಿಲ್ ಮುಂತಾದವರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು