ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಲು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಮಾಡಿದ್ದ ಮನವಿಯನ್ನು ತಿರಸ್ಕರಿಸಿರುವ ಬೆಂಗಳೂರಿನ ಸೆಷನ್ಸ್ ಕೋರ್ಟ್, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ತಿಳಿಸಿದೆ.

ಇದೇ ವೇಳೆ, ಜೈಲಿನಲ್ಲಿ ಕನಿಷ್ಠ ಸೌಲಭ್ಯ ಒದಗಿಸಬೇಕೆಂಬ ದರ್ಶನ್ ಮನವಿ ಮಾನ್ಯ ಮಾಡಿರುವ ನ್ಯಾಯಾಲಯ, ಕಾರಾಗೃಹದ ನಿಯಮಗಳ ಅನುಸಾರ ಯಾವೆಲ್ಲ ಕನಿಷ್ಠ ಸೌಲಭ್ಯಗಳು ಇವೆಯೋ ಅವೆಲ್ಲವನ್ನೂ ಒದಗಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲು ಕೋರಿ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಜೈಲಿನಲ್ಲಿ ಹಾಸಿಗೆ, ದಿಂಬು, ಹೊದಿಕೆ ಒದಗಿಸಲು ಮನವಿ ಮಾಡಿ ದರ್ಶನ್ ಸಲ್ಲಿಸಿದ್ದ ಅರ್ಜಿಗಳ ಕುರಿತು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಐ.ಪಿ. ನಾಯ್ಕ್ ಮಂಗಳವಾರ ಪ್ರಕಟಿಸಿದರು.

ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಬೇರೆ ಜೈಲುಗಳಿಗೆ ಸ್ಥಳಾಂತರಗೊಳಿಸುವಂತೆ ಕೋರಿ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಹಾಸಿಗೆ, ದಿಂಬು ಹಾಗೂ ಬೆಡ್ ಶೀಟ್ ನೀಡಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ.