ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿರುವ ಸಚಿವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ವರ್ಷದ ವೇಳೆಗೆ ಇನ್ನೂ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದಿದ್ದಾರೆ.
ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ‘ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

