ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸರ್ಕಾರ ಸ್ಪಷ್ಟನೆ ನೀಡಿದೆ.
ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಹೇಳಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡಿಗರ ಬಹುದಿನದ ಬೇಡಿಕೆ ಎಂದರೆ ಖಾಸಗಿ ಕಂಪನಿಗಳಲ್ಲಿ ರಾಜ್ಯದ ಜನರಿಗೆ ಶೇ. 100ರಷ್ಟು ಮೀಸಲಾತಿ ನೀಡಬೇಕು ಎಂಬುದು. ಕನ್ನಡಿಗರ ಈ ಬೇಡಿಕೆಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತು ಎಂದಿತ್ತು. ಈ ಮೂಲಕ ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸ್ಪಷ್ಟ ನಿಲುವು ತಾಳಿತ್ತು.
ಕರ್ನಾಟಕದಲ್ಲಿರೋ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿತ್ತು. ಕನ್ನಡಿಗರಿಗೆ ಸಿಹಿಸುದ್ದಿ ನೀಡಿದ್ದ ಸರ್ಕಾರ ಪ್ರಮುಖ ಔದ್ಯೋಗಿಕ ಮೀಸಲಾತಿ ಮಸೂದೆ ಜಾರಿಗೆ ತರಲು ಮುಂದಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಉದ್ಯಮಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ರುದರು. ಈ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

