ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ ಹಸು ಕೆಚ್ಚಲು ಕೂಯ್ದ ಕೇಸ್ ಗೆ ಸಂಬಂಧಿಸಿದಂತೆ ಓರ್ವನ ಬಂಧನವಾಗಿದೆ. ಬಿಹಾರ ಮೂಲದ ನಸ್ರು ಬಂಧಿತ ಆರೋಪಿಯಾಗಿದ್ದು, ಈತ ಪ್ರಕರಣ ನಡೆದ ಸ್ಥಳದಿಂದ ಅನತಿ ದೂರದಲ್ಲೇ ಹಾಸಿಗೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಕರೆದೊಯ್ದು, ಸ್ಥಳ ಮಹಜರು ನಡೆಸಿದ್ದಾರೆ. ಚಾಮರಾಜಪೇಟೆಯ ಓಲ್ಡ್ ಪೆನ್ನನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.

ಹಸುಗಳ ಮಾಲೀಕ ಕರ್ಣ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಪಡೆಯಲಾಗಿದೆ.