ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ಯೋಗೇಶ್ವರ್ ಬೆಂಬಲಿಗರು ಆಯೋಜಿಸಿದ್ದ ಸಮಾನ ಮನಸ್ಕರ ಸಮಾವೇಶ ಅಂತಿಮ ಕ್ಷಣದಲ್ಲಿ ರದ್ದಾಗಿದೆ.
ಯೋಗೇಶ್ವರ್ ಅಭಿಮಾನಿ ಬಳಗ ಮತ್ತು ಸಮಾನ ಮನಸ್ಕರ ವೇದಿಕೆ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ‘ನಮ್ಮ ಶಾಸಕ ನಮ್ಮ ಹಕ್ಕು’ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಂಡಿತ್ತು.
ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೇ, ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಮುಂದಾಗಿದ್ದ ಸಿಪಿವೈಗೆ ಇಂದು ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಯೋಗೇಶ್ವರ್ ರನ್ನ ದೆಹಲಿಗೆ ಕರೆಸಿರೋ ಬಿಜೆಪಿ ನಾಯಕರು ಟಿಕೆಟ್ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಪಕ್ಷದಿಂದ ಕಣಕ್ಕಿಳಿಯಲು ಬಯಸಿದ್ದ ಯೋಗೇಶ್ವರ್ ಅವರಿಗೆ ಮೈತ್ರಿ ನಾಯಕರಿಂದ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಉದ್ದೇಶದಿಂದ ಬೃಹತ್ ಸಮಾವೇಶ ನಡೆಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರು. ಇದೀಗ ಹೈಕಮಾಂಡ್‌ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ಯೋಗೇಶ್ವರ್ ದೆಹಲಿಗೆ ತೆರಳಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಲಿದ್ದಾರೆ.