ಬೆಂಗಳೂರು: ಎಲ್ಲೆಡೆ ಭರ್ಜರಿ ಮಳೆಯಾಗಿದ್ದು, ಮಳೆಯ ಆರ್ಭಟದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಾದ್ಯಂತ ಸೋಮವಾರ ಭಾರೀ ಮಳೆಯಾಗಿದ್ದು, ಜಿಲ್ಲಾಡಳಿತ ಸೂಚನೆ ಮೇರೆಗೆ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನಾಳೆ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲ್ಟ್ ಘೋಷಿಸಿದ್ದು, ನಾಳೆ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಐಟಿಐ, ಡಿಪ್ಲೋಮೋ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಶಾಲೆ, ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ. ಹಳಿಯಾಳ ಮತ್ತು ಮುಂಡಗೊಂಡ ತಾಲೂಕಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಮುಂದುವರಿಯಲಿವೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ಹಾಗೂ ಬೇಲೂರು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಯು ಮಹಾಲಿಂಗಯ್ಯ ಆದೇಶಿಸಿದ್ದಾರೆ. ಉಳಿದ ಕಡೆ ಎಂದಿನಂತೆ ಶಾಲಾ ಕಾಲೇಜುಗಳು ಮುಂದುವರಿಯಲಿದೆ.

