ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಾಳೆ ಸಂಜೆ 5 ಗಂಟೆಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024 ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸುವರು. ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿರುವರು. ಡಿಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ಮತ್ತು ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡುವರು.