News Karnataka Kannada
Thursday, April 25 2024
Cricket
ತುಮಕೂರು

ತುಮಕೂರು: ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಕರೆ

Tumakuru: Minister Dr G Parameshwara calls for proper implementation of government schemes
Photo Credit : News Kannada

ತುಮಕೂರು: ಹೊಸ ಸರ್ಕಾರದ ಮೇಲೆ ಜನರ ನಿರೀಕ್ಷೆ ಹೆಚ್ಚಿದ್ದು, ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಕರೆ ನೀಡಿದರು.

ಇಂದು ಪಾವಗಡ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಸರಬರಾಜು, ಮುಂಗಾರು ಸಿದ್ಧತೆ ಹಾಗೂ ಇತರೆ ಪ್ರಮುಖ ವಿಚಾರಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಾ, ಜನರ ಸಮಗ್ರ ಕಲ್ಯಾಣಕ್ಕಾಗಿಯೇ ಸರ್ಕಾರವು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಸರ್ಕಾರಿ ನೌಕರರು, ಯೋಜನೆಗಳ ಫಲಾನುಭವಿಗಳಿಂದ ಯಾವುದೇ ಫಲಾಪೇಕ್ಷೆ ಬಯಸದೇ ನಿಸ್ವಾರ್ಥವಾಗಿ ಕರ್ತವ್ಯ ನಿರ್ವಹಿಸಬೇಕು ಈ ಬಗ್ಗೆ ದೂರು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪಾವಗಡ ತಾಲ್ಲೂಕಿನ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಸಮಗ್ರ ಮಾಹಿತಿ ಪಡೆದ ಸಚಿವರು, ತಾಲೂಕಿನ ಎರಡು ಸಾವಿರ ರೈತರಿಗೆ ಹನಿ ನೀರಾವರಿ ಉಪಕರಣಗಳನ್ನು ವಿತರಿಸುವಂತೆ ಸೂಚಿಸಿದರು.

ರೈತರಿಗೆ ಅನುಕೂಲವಾಗುವಂತೆ ಕೃಷಿ ಹೊಂಡಗಳ ನಿರ್ಮಾಣ ಮಾಡಿ, ಈಗಾಗಲೇ ನಿರ್ಮಾಣಗೊಂಡಿರುವ ಕೃಷಿ ಹೊಂಡಗಳ ಸಮರ್ಪಕ ಬಳಕೆಯಾಗುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವಂತೆ ಸೂಚಿಸಿದರು.

ತಾಲೂಕಿನ ಕೊಳವೆ ಬಾವಿಗಳಿಂದ ಫ್ಲೋರೈಡ್ ರಹಿತ ಶುದ್ಧ ಕುಡಿಯುವ ನೀರನ್ನು ವ್ಯತ್ಯಯವಾಗದಂತೆ ಪೂರೈಸಬೇಕು. ಜಲ ಜೀವನ್ ಅಭಿಯಾನದಡಿ ಜಿಲ್ಲೆಯಲ್ಲಿ ಅಳವಡಿಸಿರುವ ಪ್ಲಾಸ್ಟಿಕ್ ಪೈಪ್‌ಗಳು ಕಿತ್ತು ಬರುವಂತಿದ್ದು, ಇವುಗಳನ್ನು ಬದಲಿಸಿ ಸಧೃಡ ಕಬ್ಬಿಣ ಪೈಪ್‌ಗಳನ್ನು ಅಳವಡಿಸುವಂತೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ತಾಲೂಕುನಲ್ಲಿ ಕಾರ್ಯನಿರ್ವಹಿಸುತ್ತಿರುವ ೧೫ ವಸತಿ ನಿಲಯದಲ್ಲಿ ೧೭೦೦ ಸಂಖ್ಯೆಯ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟು, ವಸತಿ ನಿಲಯದಲ್ಲಿ ಶುಚಿತ್ವ, ಆಹಾರ ಗುಣಮಟ್ಟ, ರಕ್ಷಣೆ ಬಗ್ಗೆ ನಿಗಾ ವಹಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಜೂನ್ ೧೧ ರಿಂದ ೨೧ರವರಿಗೆ ಶಕ್ತಿ ಯೋಜನೆಯಡಿ ತಾಲೂಕಿನ ೫೯೩೭೫ ಸಂಖ್ಯೆಯ ಮಹಿಳೆಯರು ಸದುಪಯೋಗ ಪಡಿಸಿಕೊಂಡಿರುವ ಮಾಹಿತಿ ಪಡೆದ ಸಚಿವರು, ತಾಲೂಕಿನಲ್ಲಿರುವ ಕರ್ನಾಟಕ ಸಾರಿಗೆಯ ೪೨ ಬಸ್‌ಗಳ ಜೊತೆ ಅಗತ್ಯ ಇರುವ ಕಡೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ಸರ್ಕಾರದ ನಿಯಾಮಾನುಸಾರ ತಾಲೂಕಿನ ೬೨೨೦೩ ಮಹಿಳಾ ಫಲಾನುಭವಿಗಳಿಗೆ ಸೌಲಭ್ಯವನ್ನು ದೊರಕಿಸಿಕೊಡುವಲ್ಲಿ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರಗೆ ಸೂಚಿಸಿದರು.

ರಸಗೊಬ್ಬರ ವಿತರಣೆ ಕೇಂದ್ರದಲ್ಲಿ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರಕಟಿಸಿರುವ ಬಗ್ಗೆ ಖಚಿತ ಪಡಿಸಿಕೊಂಡು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹೆಚ್.ವಿ ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಸರ್ಕಾರಿ ಆಸ್ಪತ್ರೆಗಳು, ಅರಣ್ಯೀಕರಣ, ಲೋಕೋಪಯೋಗಿ ಇಲಾಖೆಯ ಕಾಮಗಾರಿ ಮೊದಲಾದ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು. ಸಭೆಯ ನಂತರ ಸಚಿವರು ಸೋಲಾರ್ ಪಾರ್ಕ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಉಪವಿಭಾಗಾಧಿಕಾರಿ ರಿಷಿ ಆನಂದ್ ಐ.ಎ.ಎಸ್. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರವಿ ಕೆ.ಹೆಚ್, ಎತ್ತಿನಹೊಳೆ ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ, ಕೃಷಿ ಇಲಾಖೆಯ ಮಧುಗಿರಿ ವಿಭಾಗದ ಜಂಟಿ ನಿರ್ದೇಶಕಿ ದೀಪಶ್ರೀ, ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರಾದ ರಾಮಕೃಷ್ಣ, ಜಿಲ್ಲಾ ಯೋಜನಾ ನಿರ್ದೇಶಕ ಆಂಜಿನಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ದಿನೇಶ್, ತಾಲೂಕು ಆರೋಗ್ಯಾಧಿಕಾರಿ ತಿರುಪತ್ತಯ್ಯ, ತಹಶೀಲ್ದಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು