ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಹೀಂದ್ರಾ ಥಾರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಪವನ್ ಮತ್ತು ದೀಪಕ್ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಮಹೀಂದ್ರಾ ಥಾರ್​ನಲ್ಲಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯರು ಹಾಗೂ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತಕ್ಕೆ ಅತೀ ವೇಗವೂ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತನಿಖೆಯ ಬಳಿಕವೇ ತಿಳಿಯಲಿದೆ. ಘಟನಾ ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.