ಬೀದರ್‌: ‘ನೀಟ್‌’ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ‘ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಶನ್‌’ (ಎಐಡಿಎಸ್‌ಒ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಹ ಸಂಚಾಲಕ ವೆಂಕಟೇಶ ದೇವದುರ್ಗ, ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ.

ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಕೆಲ ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ.

ಆದರೆ, ಹೆಚ್ಚುವರಿ ಅಂಕಗಳು ನೀಡಿರುವ ಮಾನದಂಡ ಸಂಪೂರ್ಣವಾಗಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದರು. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ.

ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಆದರೆ, ಅದರ ಬಗ್ಗೆ ತನಿಖೆ ನಡೆಸಿಲ್ಲ. ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುತ್ತದೆ ಎಂದರು.