ಚಾಮರಾಜನಗರ: ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಬಳ್ಳಾರಿ ಆಸ್ಪತ್ರೆಗೆ ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು.

ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.

ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದ್ದೇನೆ ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.