ಗುಂಡ್ಲುಪೇಟೆ : ತಾಲೂಕಿನ ಬೊಮ್ಮಲಾಪುರ ಗ್ರಾಮಪಂಚಾಯತಿ ವ್ಯಾಪ್ತಿಯ ಅಂಕಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹಮ್ಮಿಕೊಂಡಿದ್ದ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡಿದ್ದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಗ್ರಾಮಪಂಚಾಯತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ನಾಲ್ಕು ಲಕ್ಷ ವೆಚ್ಚದ ಕಾಲುವೆ ನಿರ್ಮಾಣ ಕಾಮಗಾರಿ ಆರಂಭವಾದರೂ ಸಹ ಇದುವರೆಗೂ ಪೂರ್ಣಗೊಂಡಿಲ್ಲ, ಅರ್ಧಕ್ಕೆ ಕೆಲಸ ಸ್ಥಗಿತಗೊಳಿಸಿದ ಗ್ರಾಮಪಂಚಾಯತಿ ಆಡಳಿತ ಮಂಡಳಿ ಜೆಸಿಬಿ ಮೂಲಕ ಕಾಮಗಾರಿ ನಡೆಸಲು ಮುಂದಾಗಿದೆ.

ಮೊದಲಿಗೆ ಸ್ಥಳೀಯರಿಗೆ ಉದ್ಯೋಗ ನೀಡಿದ್ದ ಪಂಚಾಯತಿ ಏಕಾಏಕಿ ಕಾಮಗಾರಿ ಸ್ಥಗಿತಗೊಳಿಸಿ ಯಂತ್ರದ ಮೊರೆಮೋಗಿರುವುದು ಹಣ ದೋಚುವ ಉನ್ನಾರವಾಗಿದೆ ಎಂದು ಆರೋಪಿಸಲಾಗಿದೆ. ನಿಯಮಾನುಸಾರ ಕಾಮಗಾರಿ ನಡೆಸದೆ ಯಂತ್ರದ ಬಳಕೆಗೆ ಮುಂದಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮದ ಕುಮಾರ್ ಎಚ್ಚರಿಕೆ ನೀಡಿದ್ದಾರೆ.