ಚಿಕ್ಕಮಗಳೂರು : ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.

ಮಂಗಳವಾರ ಹಾಸ್ಟೆಲ್‌ನಲ್ಲಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ, ದಿಶಾ ಕೊನೆಯುಸಿರೆಳೆದಿದ್ದಾರೆ.

ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.