ಚಿಕ್ಕಮಗಳೂರು: ವಾಹನ ಸವಾರರಿಗೆ ಮುದ ನೀಡುವ ಚಾರ್ಮಾಡಿ ಘಾಟ್​ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ.

ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ.

ಇತ್ತ ಹಾಸನ ಜಿಲ್ಲೆ ಸಕಲೇಶಪುರದ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ನಿನ್ನೆಯೂ ಮುಂದುವರಿಯಿತು. ಬಾರಿ ಮಳೆಯ ನಡುವೆಯೂ 400ಕ್ಕೂ ಹೆಚ್ಚು ಕಾರ್ಮಿಕರಿಂದ ಕಾರ್ಯಾಚರಣೆ ನಡೆಯುತ್ತಿದ್ದು, 15 ದಿನಗಳ ಕಾಲ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗ ಬಂದ್ ಮಾಡಲಾಗಿದೆ.