ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.
ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.