ಬೆಂಗಳೂರು: ಸಾರ್ಕರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರ ಮುಂದಾಗಿತ್ತು ಆದರೆ ಈ ಬಗ್ಗೆ ಅಂಗನವಾಡಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ಸಿ ಎಂ ಸಹಮತ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಇನ್ನುಳಿದ ಭಾಗದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿಕ್ಷಣದ ಸಚಿವ ಮಧು ಬಂಗಾರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಭೆ ನಡೆಸಿದ್ದಾರೆ.
ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನ ಮಾಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವು ನಮ್ಮ ಉದ್ದೇಶವಾಗಿದೆ,. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನ ಮಾಡಲಾಗಿದೆ. ಜತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

