ಹಾಸನ: ಹಾಸನ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಆರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜು.26ರಂದು ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ  ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿಡಿಪಿಐ ಹೆಚ್.ಕೆ.ಪಾಂಡು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲೂ ಮಳೆ ಅಬ್ಬರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಗೆ ಹಾಸನದ ಐಗೂರು ಹೊಳೆ ಉಕ್ಕಿ ಹರಿದಿದೆ. ಪರಿಣಾಮ ಯಡಿಕೇರಿ-ಕುಂಬ್ರಳ್ಳಿ ,ಹೆತ್ತೂರು ನಡುವಿನ ಸೇತುವೆ ಮಳುಗಡೆಯಾಗಿದೆ. ಸಕಲೇಶಪುರ ತಾಲೂಕಿನ ಯಡಿಕೇರಿ-ಕುಂಬ್ರಳ್ಳಿ ನಡುವಿನ ಸೇತುವೆ ಮುಳುಗಡೆಯಿಂದಾಗಿ ಯಡಿಕೇರಿ-ಕುಂಬ್ರಳ್ಳಿ-ಹೆತ್ತೂರು ಹಾಗೂ ಸಕಲೇಶಪುರಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಕೆಲವೆಡೆ ಗಾಳಿ ಜತೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.