ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯು ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ. ಸಿಬಿಐ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದ್ದು, ನೀವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ.

ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಕೈಬಿಡಲು ರಾಜ್ಯ ಸಚಿವ ಸಂಪುಟದಿಂದ ನಿರ್ಣಯ ಕೈಗೊಳ್ಳಲಾಗಿತ್ತು. ಜೊತೆಗೆ, ಈ ಪ್ರಕರಣವನ್ನು ಲೋಕಾಯುಕ್ತಕ್ಕೆ ನೀಡಲು ನಿರ್ಧರಿಸಲಾಗಿತ್ತು. ಆದರೆ, ಲೋಕಾಯುಕ್ತ ತನಿಖೆಗೆ ಕೊಡುವ ನಿರ್ಣಯವನ್ನು ಪ್ರಶ್ನಿಸಿ ಸಿಬಿಐ ಹಾಗೂ ರಾಜ್ಯ ಸರ್ಕಾರ ಕೈಗೊಂಡ ನಿರ್ಣಯದ ವಿರುದ್ಧ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ವಿಚಾರಣೆ ಮಾಡಿದ್ದ ನ್ಯಾಯಾಲಯದ ಆ.29ಕ್ಕೆ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ನೀಡಿದ ಹೈಕೋರ್ಟ್ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಯತ್ನಾಳ್ ಸಲ್ಲಿಕೆ ಮಾಡಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಈ ಪ್ರಕರಣ ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವಂತೆ ಆದೇಶ ನೀಡಿದೆ.