ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿಯಲಿದೆ. ಜು.22ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.
ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಆರೆಂಜ್ ಅಲರ್ಟ್ ಘೋಷಣೆ
ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬೆಳಗಾವಿ, ಬೀದರ್, ಕಲಬುರಗಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

