ಬೆಂಗಳೂರು: ಮಂಗಳವಾರ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಗಳವಾರ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೀದರ್, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.