ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಸೆಪ್ಟೆಂಬರ್ 11 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೊತೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಹೀಗಾಗಿ ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಮುಂಗಾರು ಹಂಗಾಮಿಗೆ ಇನ್ನೂ ಒಂದು ತಿಂಗಳು ಬಾಕಿ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈಗಾಗಲೇ ಈ ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.