ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳಲ್ಲಿ ಅ.18 ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ವರದಿಯ ಪ್ರಕಾರ, ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಗುರುವಾರ ಅಂದರೆ ಇಂದು ಹಾಗೂ ನಾಳೆ ಗುಡುಗು ಸಹಿತ ಹೆಚ್ಚು ಮಳೆಯಾಗಲಿರುವ ಹಿನ್ನೆಲೆ ಮಲೆನಾಡು ಹಾಗೂ ಕರಾವಳಿಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.  ಅಕ್ಟೋಬರ್ 17 ರಿಂದ 19ರ ವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿ ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎನ್ನಲಾಗಿದೆ.

ಭಾರೀ ಗಾಳಿ ಮಳೆಯ ಹಿನ್ನಲೆ  ಆಗ್ನೇಯ ಅರೇಬಿಯನ್ ಸಮುದ್ರ, ಲಕ್ಷದ್ವೀಪ ಮತ್ತು ಕೊಮೊರಿನ್ ಪ್ರದೇಶ ಮತ್ತು  ಕರ್ನಾಟಕ, ಕೇರಳ ಮತ್ತು ದಕ್ಷಿಣ ತಮಿಳುನಾಡು ಕರಾವಳಿಗಳಿಗೆ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ಎಲ್ಲಾ ಭಾಗಗಳಲ್ಲೂ ಮಳೆ ಸುರಿಯಲಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಭಾಗದಲ್ಲಿ ಇದು ತೀವ್ರವಾಗಿರುತ್ತದೆ. ಈ ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬುವುದು, ಸಂಚಾರ ಅಸ್ತವ್ಯಸ್ತ ಆಗುವುದು, ಮತ್ತು ವಿದ್ಯುತ್ ಸಮಸ್ಯೆಗಳು ಉಂಟಾಗಬಹುದು. ಹೀಗಾಗಿ, ಜನರು ಸ್ವಲ್ಪ ಎಚ್ಚರವಹಿಸಿ, ಅಗತ್ಯವಿಲ್ಲದೆ ಯಾವುದೇ ಕಾರಣಕ್ಕೂ ಹೊರಕ್ಕೆ ಬರಬೇಡಿ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.